ಆ್ಯಪ್ನಗರ

ಕಲ್ಯಾಣ ಕರ್ನಾಟಕದಲ್ಲಿ ಗುಜರಾತ್‌ ಮಾದರಿ ಪ್ರಯೋಗ : ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಕೂಡ ಒಲಿದಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕ ದಿನಾಚರಣೆ ಅಂಗವಾಗಿ ಮಂಗಳವಾರ ಬಳ್ಳಾರಿಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದ್ದಾರೆ.

Vijaya Karnataka Web 17 Sep 2019, 11:40 am
ಬಳ್ಳಾರಿ: ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಸಿಕ್ಕಿರುವುದು ಅನಿರೀಕ್ಷಿತ. ಇದರಿಂದ ಸಂತಸವಾಗಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಪಕ್ಷದ ನಾಯಕರು ಭರವಸೆ ಇಟ್ಟು ಹಲವು ಜವಾಬ್ದಾರಿ ನೀಡಿದ್ದಾರೆ. ಇದನ್ನು ಸರಿಯಾಗಿ ನಿಭಾಯಿಸುತ್ತೇನೆ. ಪ್ರಧಾನಿ ಮೋದಿ, ಅಮಿತ್ ಶಾ ಗುಜರಾತ್ ನಲ್ಲಿ ಸ್ಥಳೀಯರಿಗೆ ಸಚಿವರಿಗೆ ಸ್ಥಾನ ನೀಡದೇ ಬೇರೆಯವರಿಗೆ ಅವಕಾಶ ನೀಡುವ ಮೂಲಕ ಅಭಿವೃದ್ಧಿಗೆ ನಾಂದಿ ಹಾಡಿದ್ದರು. ಇದೇ ಮಾದರಿಯನ್ನು ಕರ್ನಾಟಕದಲ್ಲೂ ಪ್ರಯೋಗಿಸಲಾಗುತ್ತಿದೆ. ಬಳ್ಳಾರಿ ಉಸ್ತುವಾರಿ ನನಗೆ ಸಿಕ್ಕಿದ್ದು ಶ್ರೀರಾಮುಲು ಅವರಿಗೆ ಸಂತಸ ತಂದಿದೆ. ರಾಮುಲು ಮತ್ತು ನಾನು ಸಹೋದರರಿದ್ದಂತೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
Vijaya Karnataka Web lakshman soudi

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮಂಗಳವಾರ ಬಳ್ಳಾರಿಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಹೈದ್ರಾಬಾದ್‌-ಕರ್ನಾಟಕ ನಿಜಾಮರ ಆಳ್ವಿಕೆಯಿಂದ ಸ್ವಾತಂತ್ರ್ಯಗೊಂಡು 73 ವರ್ಷಗಳಾದ ನೆನಪಿನಲ್ಲಿ ಇಂದು ಏರ್ಪಡಿಸಿರುವ ಕಲ್ಯಾಣ ಕರ್ನಾಟಕ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಸಂತೋಷವಾಗುತ್ತಿದೆ. ಹೈದರಾಬಾದ್‌ ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದ ಕಲಬುರಗಿ, ಬೀದರ್‌, ರಾಯಚೂರು ಹಾಗೂ ಬಳ್ಳಾರಿ ಪ್ರದೇಶಗಳು ಸ್ವತಂತ್ರ್ಯವಾಗಲು ಒಂದು ವರ್ಷಕ್ಕೂ ಹೆಚ್ಚು ಕಾಲ ಕಾಯಬೇಕಾಯಿತು. ಹೈದ್ರಾಬಾದ್‌ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ ಸಂವಿಧಾನದ ತಿದ್ದುಪಡಿಕಾಯ್ದೆ 371(ಜೆ) ಜಾರಿಯಲ್ಲಿದೆ. ಅದರಂತೆ ಸರಕಾರವು ಹೈಕ ಪ್ರದೇಶಾಭಿವೃದ್ದಿ ಮಂಡಳಿ ರಚಿಸಿದ್ದು, ಇದರಡಿ ಹೈಕ ಭಾಗದ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳ ಅಭಿವೃದ್ಧಿ ಕಾರ್ಯಗಳು ಮತ್ತು ಮೂಲ ಸೌಕರ್ಯ ಒದಗಿಸುವುದಕ್ಕೆ ಅನುದಾನ ಮೀಸಲಿರಿಸಿದೆ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ 2013-14ನೇ ಸಾಲಿನಿಂದ 2019-20 ಸಾಲಿನವರೆಗೆ ಬಳ್ಳಾರಿ ಜಿಲ್ಲೆಗೆ ಒಟ್ಟು ರೂ.832.82 ಕೋಟಿ ಅನುದಾನ ಹಂಚಿಕೆಯಾಗಿದ್ದು. ಒಟ್ಟು 3255 ಕಾಮಗಾರಿಗಳನ್ನು ಕೈಗೆತ್ತಿಕೊಂಡು 2104 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದಕ್ಕೆ ರೂ.422.68 ಕೋಟಿ ಅನುದಾನ ವೆಚ್ಚ ಮಾಡಲಾಗಿದೆ ಎಂದು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಅನುಷ್ಠಾನದ ಕುರಿತು ಮಾಹಿತಿ ನೀಡಿದರು.

ತುಂಗಭದ್ರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದು ಹಿನ್ನೀರಿನ ತಾಲೂಕುಗಳಾದ ಹಡಗಲಿ ಮತ್ತು ಹರಪನಹಳ್ಳಿ ತಾಲ್ಲೂಕುಗಳಲ್ಲಿ ಪರಿಹಾರ ಕ್ರಮಗಳ ಕುರಿತು ಮಾಹಿತಿ ಹಂಚಿಕೊಂಡರು. ಕಲ್ಯಾಣ ಕರ್ನಾಟಕ ಸರ್ವತೋಮುಖ ಅಭಿವೃದ್ದಿಗಾಗಿ ನಾವೆಲ್ಲರೂ ಒಟ್ಟಾಗಿ ದುಡಿಯಬೇಕು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ