ಆ್ಯಪ್ನಗರ

ಎಚ್‌1ಎನ್‌1: ಮುಂಜಾಗ್ರತೆ ಕೈಗೊಳ್ಳಲು ಡಿಸಿ ಸೂಚನೆ

ರಾಜ್ಯದಲ್ಲಿ ಎಚ್‌1ಎನ್‌1 ಪ್ರಕರಣಗಳು ಪತ್ತೆಯಾಗುತ್ತಿದ್ದು ಈ ಬಗ್ಗೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕರೀಗೌಡ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Vijaya Karnataka 21 Oct 2018, 3:22 pm
ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಎಚ್‌1ಎನ್‌1 ಪ್ರಕರಣಗಳು ಪತ್ತೆಯಾಗುತ್ತಿದ್ದು ಈ ಬಗ್ಗೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕರೀಗೌಡ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Vijaya Karnataka Web take precautionary measures to prevent h1n1
ಎಚ್‌1ಎನ್‌1: ಮುಂಜಾಗ್ರತೆ ಕೈಗೊಳ್ಳಲು ಡಿಸಿ ಸೂಚನೆ


ನೂತನ ಜಿಲ್ಲಾಧಿಕಾರಿ ಭವನದಲ್ಲಿ ಮೊದಲ ಬಾರಿಗೆ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ಆಯೋಜಿಸಿ ಮಾತನಾಡಿದ ಅವರು, ಎಚ್‌1ಎನ್‌1 ಎಂದಾಕ್ಷಣ ಜನ ಗಾಬರಿಗೀಡಾಗುತ್ತಾರೆ. ಹೀಗಾಗಿ ಸಾರ್ವಜನಿಕರಲ್ಲಿ ಧೈರ್ಯ ತುಂಬುವುದರ ಜತೆಗೆ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದರು.

ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಪಂ ಮಟ್ಟದಲ್ಲಿ ಪ್ರಚಾರ ಕಾರ್ಯಗಳನ್ನು ಕೈಗೊಳ್ಳುವುದರ ಜತೆಗೆ ಸ್ವಚ್ಛತೆ ಬಗ್ಗೆ ಗ್ರಾಮೀಣ ಜನರಿಗೆ ತಿಳಿ ಹೇಳಬೇಕು. ಟ್ಯಾಂಕರ್‌ಗಳ ನೀರನ್ನು ವಾರಕ್ಕೊಮ್ಮೆ ಶುಚಿಗೊಳಿಸುವ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು. ಸೋಂಕಿನ ಕುರಿತು ಪರೀಕ್ಷೆ ನಡೆಸುವ ಕ್ಲಿನಿಕ್‌ಗಳು ಸರಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚಿಗೆ ಹಣ ವಸೂಲಿ ಮಾಡಿದರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಆರು ಪ್ರಕರಣ ಪತ್ತೆ: ಜಿಲ್ಲೆಯಲ್ಲಿ ಇದುವರೆಗೂ ಮೂರು ಶಂಕಿತ ಮತ್ತು ಮೂರು ಎಚ್‌1ಎನ್‌1ಪ್ರಕರಣಗಳು ಪತ್ತೆಯಾಗಿದೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯೋಗೇಶ್‌ ಗೌಡ ಮಾಹಿತಿ ನೀಡಿದರು.

ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಎಚ್ಚರಿಕೆ ವಹಿಸಲಾಗುತ್ತಿದೆ. ಈಗಾಗಲೇ ಹಳ್ಳಿಗಳಲ್ಲಿ ವಾರಕ್ಕೊಮ್ಮೆ 'ಡ್ರೈ ಡೇ' ಎಂಬ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಟ್ಯಾಂಕರ್‌, ಮನೆಗಳಲ್ಲಿ ತುಂಬಿಕೊಂಡಿರುವ ನೀರನ್ನು ವಾರಕ್ಕೊಮ್ಮೆ ಬದಲಿಸುವಂತೆ ಪ್ರಚಾರ ಅಭಿಯಾನ ನಡೆಸಲಾಗುತ್ತಿದೆ. ಮನೆ ಅಕ್ಕಪಕ್ಕ ನೀರು ನಿಲ್ಲದಂತೆ ಕಟ್ಟೆಚ್ಚರ ವಹಿಸುವಂತೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಜತೆಗೆ ಗ್ರಾಪಂ ಮಟ್ಟದ ಅಧಿಕಾರಿಗಳನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದರು.

ನಗರ, ಪಟ್ಟಣ ಹಾಗೂ ಹಳ್ಳಿಗಳ ರಸ್ತೆ, ಮನೆ ಅಕ್ಕಪಕ್ಕ ನೀರು ನಿಲ್ಲದಂತೆ ಎಚ್ಚರ ವಹಿಸುವಂತೆ ಸಾರ್ವಜನಿಕರಿಗೆ ತಿಳಿಸಲಾಗುತ್ತಿದೆ. ನಗರಸಭೆ, ಪುರಸಭೆ ಹಾಗೂ ಗ್ರಾಪಂ ಮಟ್ಟದ ಅಧಿಕಾರಿಗಳನ್ನು ಸಭೆಗೆ ಆಹ್ವಾನಿಸಿ ನೈರ್ಮಲ್ಯ ಕಾಪಾಡುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

2500 ರೂ.ಗಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ: ಎಚ್‌1ಎನ್‌1 ಸೋಂಕಿನ ಪರೀಕ್ಷೆಗೆ 2500 ರೂ.ಗಿಂತ ಹೆಚ್ಚಿಗೆ ಹಣ ವಸೂಲಿ ಮಾಡದಂತೆ ಸರಕಾರ ಆದೇಶ ನೀಡಿದೆ. ಒಂದು ವೇಳೆ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಿದ್ದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಡಾ. ಯೋಗೇಶ್‌ ಗೌಡ ಹೇಳಿದರು. ಇದೊಂದು ಸಾಮಾನ್ಯ ವೈರಸ್‌ ಜ್ವರವಾಗಿದ್ದು ಜನ ಆತಂಕಪಡುವ ಅಗತ್ಯವಿಲ್ಲ. ಸೋಂಕಿನ ಲಕ್ಷಣಗಳು ಕಂಡುಬಂದ ಕೂಡಲೇ ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ಆರಂಭದಲ್ಲೇ ಇದನ್ನು ತಡೆಗಟ್ಟಬಹುದು. ತ್ರೀವ ಸ್ವರೂಪದ ಜ್ವರ, ವಾಂತಿ, ಮೈ, ಕೈ ನೋವು ಕಂಡುಬಂದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು. ಆರೋಗ್ಯ ಕೇಂದ್ರದಲ್ಲಿ ಔಷಧಿಗಳು ದಾಸ್ತಾನಿದ್ದು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ