Please enable javascript.ಮೋದಿಗೆ ಭ್ರಷ್ಟಾಚಾರ ಕುರಿತು ಮಾತನಾಡುವ ನೈತಿಕತೆ ಇಲ್ಲ: ಎಚ್ಕೆ - "modi is not moral about corruption" : hk - Vijay Karnataka

ಮೋದಿಗೆ ಭ್ರಷ್ಟಾಚಾರ ಕುರಿತು ಮಾತನಾಡುವ ನೈತಿಕತೆ ಇಲ್ಲ: ಎಚ್ಕೆ

Vijaya Karnataka 1 May 2018, 5:00 am
Subscribe

ಗದಗ :ಅಕ್ರಮ ಗಣಿಗಾರಿಕೆ ಕುರಿತು ತನಿಖೆ ಮುಂದುವರಿಸಲು ಸಿಬಿಐಗೆ ಅನುಮತಿ ನೀಡದಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಗದಗ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

modi is not moral about corruption hk
ಮೋದಿಗೆ ಭ್ರಷ್ಟಾಚಾರ ಕುರಿತು ಮಾತನಾಡುವ ನೈತಿಕತೆ ಇಲ್ಲ: ಎಚ್ಕೆ
ಗದಗ :ಅಕ್ರಮ ಗಣಿಗಾರಿಕೆ ಕುರಿತು ತನಿಖೆ ಮುಂದುವರಿಸಲು ಸಿಬಿಐಗೆ ಅನುಮತಿ ನೀಡದಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಗದಗ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತರು ಸಾವಿರ ಪುಟದಷ್ಟು ವರದಿಯನ್ನು ಸಿಬಿಐಗೆ ಸಲ್ಲಿಸಿದ್ದಾರೆ. ಸಿಬಿಐ ಸಹ ಪ್ರಾಥಮಿಕ ತನಿಖೆ ಕೈಗೊಂಡು ಎಫ್‌ಐಆರ್‌ ದಾಖಲಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ಅನುಮತಿ ಕೇಳಿದೆ. ಪ್ರಧಾನಿಗಳ ನೇರ ಉಸ್ತುವಾರಿಯಲ್ಲಿರುವ ಡಿಒಪಿಟಿ ಇಲಾಖೆ ಈವರೆಗೂ ಅನುಮತಿ ನೀಡದಿರುವುದು ಭ್ರಷ್ಟಾಚಾರವನ್ನು ಬೆಂಬಲಿಸುವಂತೆ ಆಗುವುದಿಲ್ಲವೇ? ಯಾವ ಬದ್ಧತೆ ಇಟ್ಟುಕೊಂಡು ಕರ್ನಾಟಕದ ಜನರ ಮುಂದೆ ಮಾತನಾಡುತ್ತೀರಿ ಎಂದು ಎಚ್‌.ಕೆ. ಪಾಟೀಲ ಪ್ರಧಾನಿಗಳನ್ನು ಪ್ರಶ್ನಿಸಿದರು.

ಸುಪ್ರಿಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳು ನೀಡಿದ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲು ಸಾಧ್ಯವಾಗದಿರುವ ಬಗ್ಗೆ ಸ್ವತಃ ಸಿಬಿಐ ಅಧಿಕಾರಿಗಳೇ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರಧಾನಿಗಳ ಒಪ್ಪಿಗೆ ಸಿಗದ ಕಾರಣದಿಂದ ತನಿಖೆಯನ್ನು ಸ್ಥಗಿತಗೊಳಿಸುವುದಾಗಿಯೂ ತಿಳಿಸಿದ್ದಾರೆ. ರಾಜ್ಯದ ಆಸ್ತಿಯನ್ನು ಲೂಟಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದ ಪ್ರಧಾನಿಗಳಿಗೆ ಕರ್ನಾಟಕದ ಜನರಿಗೆ ಮುಖ ತೋರಿಸುವ ನೈತಿಕತೆ ಇಲ್ಲ ಎಂದು ತಿಳಿಸಿದರು.

ರಾಜ್ಯ ಕಾಂಗ್ರೆಸ್‌ ಸರಕಾರ ಕಳೆದ 4 ವರ್ಷ 11ತಿಂಗಳಲ್ಲಿ ನೀಡಿರುವ ಕ್ರಾಂತಿಕಾರಕ ಯೋಜನೆಗಳ ಅನುಷ್ಠಾನದ ಜನಸ್ಪಂದನೆ ಈಗ ವ್ಯಕ್ತವಾಗುತ್ತಿದೆ. ನಾಮಪತ್ರ ಸಲ್ಲಿಕೆ ನಂತರದ ಪ್ರಚಾರ ಕಾರ್ಯಗಳಲ್ಲಿ ಜನ ತೋರಿಸುತ್ತಿರುವ ಅಭಿಮಾನ ಗೆಲುವಿನ ವಿಶ್ವಾಸ ಹೆಚ್ಚಿಸಿದೆ. ಶಿರಹಟ್ಟಿ, ರೋಣ ಮತ್ತು ನರಗುಂದ ಕ್ಷೇತ್ರದಲ್ಲಿಯೂ ಕಾಂಗ್ರೆಸ್‌ ಅಭ್ಯರ್ಥಿಗಳ ಶಕ್ತಿ ವೃದ್ಧಿಸುತ್ತಿದೆ. ಸದ್ಯದ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದಾಗ ಜಿಲ್ಲೆಯ ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ, ಮಾಜಿ ಶಾಸಕ ಡಿ.ಆರ್‌. ಪಾಟೀಲ, ಜಿಪಂ ಅಧ್ಯಕ್ಷ ವಾಸಣ್ಣ ಕುರುಡಗಿ, ಎ.ಎಂ. ಹಿಂಡಸಗೇರಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಿ.ಎಸ್‌. ಗಡ್ಡದೇವರಮಠ ಮತ್ತಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್‌ ಸೇರ್ಪಡೆ

ಗದಗ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಂ.ಎಸ್‌. ದೊಡ್ಡಗೌಡರ, ಬಿಜೆಪಿ ಮುಖಂಡರಾದ ಅಶೋಕ ಹಳ್ಳೆಪ್ಪನವರ, ಸೋಮಣ್ಣ ಮುಳಗುಂದ ತಮ್ಮ ಅಪಾರ ಬೆಂಬಲಿಗರೊಂದಿಗೆ ಎಚ್‌.ಕೆ. ಪಾಟೀಲ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡರು.

ಇಂದು ಸಿಎಂ ಸಿದ್ದರಾಮಯ್ಯ ಪ್ರಚಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ 1ರಂದು ರೋಣ ಮತ್ತು ನರಗುಂದ ಮತಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವರು. ಮೇ 1ರಂದು ಬೆಳಗ್ಗೆ 11.30ಕ್ಕೆ ನರಗುಂದ ಹಾಗೂ ಮಧ್ಯಾಹ್ನ 1 ಗಂಟೆಗೆ ರೋಣದಲ್ಲಿ ಪ್ರಚಾರ ಸಭೆ ನಡೆಸುವರು ಎಂದು ಎಚ್‌.ಕೆ. ಪಾಟೀಲ ತಿಳಿಸಿದರು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ