ಆ್ಯಪ್ನಗರ

7 ದಿನಗಳೊಳಗಾಗಿ ಸಿಬ್ಬಂದಿ ಕಡಿತ ಮಾಡಿ: ಪಾಕ್ ರಾಯಭಾರ ಕಚೇರಿಗೆ ಭಾರತದ ಖಡಕ್ ಸೂಚನೆ!

ಗುಪ್ತಚರ ಚಟುವಟಿಕೆಗಳು ಹಾಗೂ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ಕಾರಣಕ್ಕೆ, ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ ಸಿಬ್ಬಂದಿ ಸಂಖ್ಯೆಯನ್ನು ಕಡಿತಗೊಳಿಸುವಂತೆ ಭಾರತ ಖಡಕ್ ಸೂಚನೆ ನೀಡಿದೆ.

Vijaya Karnataka Web 24 Jun 2020, 10:45 am
ನವದೆಹಲಿ: ಗುಪ್ತಚರ ಚಟುವಟಿಕೆಗಳು ಹಾಗೂ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ಕಾರಣಕ್ಕೆ, ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ ಸಿಬ್ಬಂದಿ ಸಂಖ್ಯೆಯನ್ನು ಕಡಿತಗೊಳಿಸುವಂತೆ ಭಾರತ ಖಡಕ್ ಸೂಚನೆ ನೀಡಿದೆ.

ಪಾಕಿಸ್ತಾನದ ರಾಯಭಾರ ಕಚೇರಿಯಲ್ಲಿ ನಡೆಯುತ್ತಿರುವ ಚಟುವಟಿಕೆಗಳು ವಿಯೆನ್ನಾ ಒಪ್ಪಂದದ ಉಲ್ಲಂಘನೆಯಾಗಿದ್ದು, ಈ ಹಿನ್ನೆಲೆಯಲ್ಲಿ 7 ದಿನಗಳೊಳಗಾಗಿ ಶೇ.50ರಷ್ಟು ಸಿಬ್ಬಂದಿ ಕಡಿತ ಮಾಡಬೇಕು ಎಂದು ಭಾರತ ತಿಳಿಸಿದೆ.

ಇದೇ ವೇಳೆ ಇಸ್ಲಾಮಾಬಾದ್‌ನಲ್ಲಿರುವ ತನ್ನ ರಾಯಭಾರ ಕಚೇರಿಯ ಸಿಬ್ಬಂದಿಯ ಸಂಖ್ಯೆಯನ್ನೂ ಶೇ.50ರಷ್ಟಕ್ಕೆ ಇಳಿಸಲು ಭಾರತ ನಿರ್ಧರಿಸಿರುವುದು ವಿಶೇಷವಾಗಿದೆ.

ಬೇಹುಗಾರಿಕೆ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಾಕ್ ಹೈಕಮಿಷನ್ ಅಧಿಕಾರಿಗಳು

ಈ ಕುರಿತು ಮಾಹಿತಿ ನೀಡಿರುವ ಭಾರತದ ವಿದೇಶಾಂಗ ಇಲಾಖೆ, ಪಾಕಿಸ್ತಾನ ರಾಯಭಾರ ಕಚೇರಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಆಧಾರದ ಮೇಲೆ ಸಿಬ್ಬಂದಿ ಕಡಿತಕ್ಕೆ ಮುಂದಾಗುವಂತೆ ಪಾಕಿಸ್ತಾನಕ್ಕೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ.


ಅದರಂತೆ ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ 55 ಸಿಬ್ಬಂದಿ ಹಾಗೂ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ 55 ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲಾಗುವುದು.

ಕಳೆದ ಮೇ ನಲ್ಲಿ ಗುಪ್ತಚರ ಚಟುವಟಿಕೆ ನಡೆಸುತ್ತಿದ್ದ ಇಬ್ಬರು ಪಾಕ್ ರಾಯಭಾರ ಕಚೇರಿಯ ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಪಾಕಿಸ್ತಾನ ಬಂಧಿಸಿತ್ತು.

ಇಸ್ಲಾಮಾಬಾದ್‌ನ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳು ನಾಪತ್ತೆ!

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಯಭಾರ ಕಚೇರಿಯ ಸಿಬ್ಬಂದಿ ಕಡಿತಕ್ಕೆ ಸೂಚನೆ ನೀಡಲಾಗಿದ್ದು, ಪಾಕ್ ವಿರುದ್ಧದ ಭಾರತದ ರಾಜತಾಂತ್ರಿಕ ಹೆಜ್ಜೆಗಳ ಕುರಿತು ಕುತೂಹಲ ಕೆರಳುವಂತೆ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ