ಆ್ಯಪ್ನಗರ

ವೈದ್ಯರ ಮುಷ್ಕರದಿಂದ ಸೇವೆಯಲ್ಲಿ ವ್ಯತ್ಯಯ: ಸರಕಾರಿ ಆಸ್ಪತ್ರೆ ಸಿಬ್ಬಂದಿಗೆ ರಜೆ ನೀಡದಂತೆ ಸುತ್ತೋಲೆ

ಭಾರತೀಯ ವೈದ್ಯಕೀಯ ಸಂಘ ನೀಡಿರುವ ಕರೆ ಮೇರೆಗೆ ಜೂ 17ರಂದು ದೇಶಾದ್ಯಂತ ಸೇವೆ ಸ್ಥಗಿತಗೊಳಿಸಿ ವೈದ್ಯರು ಮುಷ್ಕರ ಕೈಗೊಂಡಿದ್ದಾರೆ...

Vijaya Karnataka 16 Jun 2019, 5:00 am
ಬೆಂಗಳೂರು: ಭಾರತೀಯ ವೈದ್ಯಕೀಯ ಸಂಘ ನೀಡಿರುವ ಕರೆ ಮೇರೆಗೆ ಜೂ. 17ರಂದು ದೇಶಾದ್ಯಂತ ಸೇವೆ ಸ್ಥಗಿತಗೊಳಿಸಿ ವೈದ್ಯರು ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ಸೋಮವಾರ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆ, ಕ್ಲಿನಿಕ್‌ ಹಾಗೂ ಪ್ರಯೋಗಾಲಯಗಳ ಸೇವೆ ಸ್ಥಗಿತಗೊಳಿಸಲಿವೆ. ಜತೆಗೆ ಸರಕಾರಿ ಆಸ್ಪತ್ರೆಗಳಲ್ಲೂ ಹೊರ ರೋಗಿಗಳ ಸೇವೆ ಬಂದ್‌ ಮಾಡಲು ನಿರ್ಧರಿಸಿದ್ದು ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ.
Vijaya Karnataka Web tetascope


ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಆರಂಭವಾದ ವೈದ್ಯರ ಮುಷ್ಕರ ದೇಶಾದ್ಯಂತ ವ್ಯಾಪಿಸಿದ್ದು, ವೈದ್ಯರು ಹಾಗೂ ವೈದ್ಯ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸುವಂತೆ ಹಾಗೂ ಹಲ್ಲೆ ನಡೆಸಿದವರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ರಾಷ್ಟ್ರವ್ಯಾಪ್ತಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.

ವೈದ್ಯರ ಮುಷ್ಕರದಿಂದಾಗಿ ಸರಕಾರಿ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಆಸ್ಪತ್ರೆಗಳ ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿ ರಜೆ ರದ್ದುಗೊಳಿಸಿ, ಎಲ್ಲರೂ ಕರ್ತವ್ಯಕ್ಕೆ ಹಾಜರಾಗುವಂತೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರು ಅಗತ್ಯ ಕ್ರಮ ವಹಿಸಲು ಸೂಚಿಸಲಾಗಿದೆ.

ಜನರ ಜೀವ ಉಳಿಸುವ ವೈದ್ಯರಿಗೆ ರಕ್ಷಣೆ ಇಲ್ಲದಂತಾಗಿದೆ. ಹೀಗಾಗಿ ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಕಾಯಿದೆ ಬಲಪಡಿಸುವಂತೆ ಹಾಗೂ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಸೋಮವಾರ ಹೊರ ರೋಗಿಗಳ ಸೇವೆಯನ್ನು ಸಂಪೂರ್ಣ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.- ಡಾ.ನಾಗೇಂದ್ರಸ್ವಾಮಿ, ಖಾಸಗಿ ವೈದ್ಯಕೀಯ ಸಂಸ್ಥೆಗಳ ಒಕ್ಕೂಟದ(ಎಫ್‌ಎಚ್‌ಎ) ಪ್ರಧಾನ ಸಂಚಾಲಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ