ಆ್ಯಪ್ನಗರ

‘ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ರಾಜ್ಯದ ಪಾಲು ಕೇಳಿ’; ಸಿಎಂಗೆ ಸಿದ್ದರಾಮಯ್ಯ ಆಗ್ರಹ

ಗೆಲುವಿನ ಕಿರೀಟಗಳನ್ನೆಲ್ಲ ಮುಡಿಗೇರಿಸುವ ನರೇಂದ್ರ ಮೋದಿ ಅವರಿಗೆ ವೈಫಲ್ಯಗಳ ಹೊಣೆಯನ್ನು ರಾಜ್ಯಗಳ ಹೆಗಲ ಕಡೆ ಜಾರಿಸುವ ಚಾಳಿ ಇದೆ ಎಂದಿರುವ ಸಿದ್ದರಾಮಯ್ಯ, ಪ್ರಧಾನಿಗಳಿಗೆ ಅವರ ಜವಾಬ್ದಾರಿ ನೆನಪಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಿ ಎಂದು ಒತ್ತಾಯಿಸಿದ್ದಾರೆ.

Vijaya Karnataka Web 18 Sep 2020, 11:00 am
ಬೆಂಗಳೂರು: ದಿಲ್ಲಿ ಪ್ರವಾಸದಲ್ಲಿರುವ ಸಿಎಂ ಬಿಎಸ್‌ ಯಡಿಯೂರಪ್ಪ ಸಂಪುಟ ವಿಸ್ತರಣೆಯ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ. ಜೊತೆಗೆ ನರೆ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಸಿಗಬೇಕಾದ ಪರಿಹಾರದ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.
Vijaya Karnataka Web Siddaramaiah


ಮುಖ್ಯಮಂತ್ರಿ ದಿಲ್ಲಿ ಪ್ರವಾಸದಲ್ಲಿರುವಾಗಲೇ ಇದೇ ಅವಕಾಶವನ್ನು ರಾಜ್ಯದ ಅಭಿವೃದ್ಧಿಗೆ ಬಳಸುವಂತೆ ಬಿಎಸ್‌ವೈಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಸಿಎಂಗೆ ಆಗ್ರಹಿಸಿರುವ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಕಾಡಿಬೇಡಿ ಕೊನೆಗೂ ಪ್ರಧಾನಿಗಳ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು ಬಳಸಿಕೊಳ್ಳಿ. ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ ಎಂದು ಹೇಳಿದ್ದಾರೆ.

ಸಂಪುಟ ವಿಸ್ತರಣೆಯೋ ಪುನಾರಚನೆಯೋ? ಅಂತಿಮ ನಿರ್ಧಾರ ವರಿಷ್ಠರ ಕೈಯಲ್ಲಿ

ಕಳೆದ ವರ್ಷದ ಅತಿವೃಷ್ಟಿಗೆ ರೂ.35,000 ಕೋಟಿ ಪರಿಹಾರ ಕೇಳಿದ್ದೀರಿ,‌ ಆದರೆ ಕೇಂದ್ರ ಸರ್ಕಾರ ನೀಡಿದ್ದು ರೂ.1,869 ಕೋಟಿ‌ ಎಂದಿರುವ ಸಿದ್ದರಾಮಯ್ಯ, ಈ ಬಾರಿ ರೂ.8,000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಜೊತೆಗೆ 15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ. ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್‌ಡಿಆರ್‌ಎಫ್‌ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ಸಿಗುವಂತೆ ಮಾಡಿ ಎಂದು ಆಗ್ರಹಿಸಿದ್ದಾರೆ.

ತಳಮಟ್ಟದ ಬಿಜೆಪಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಅಶೋಕ್ ಗಸ್ತಿ,

ಇದೇ ವೇಳೆ ಕೇಂದ್ರ ಸರ್ಕಾರ ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ ಎಂದಿರುವ ಸಿದ್ದರಾಮಯ್ಯ, ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು - ನೋವಿಗೀಡಾಗುವ ಮೊದಲು, ಪ್ಯಾಕೇಜ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ. ನ್ಯಾಯಬದ್ಧವಾಗಿ ರಾಜ್ಯಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪರಿಹಾರ ರೂ.25,508 ಕೋಟಿ ನೀಡದೆ ದ್ರೋಹ ಬಗೆದಿರುವ ಕೇಂದ್ರ ಸರ್ಕಾರ, ಸಾಲ ಎತ್ತಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈಗೆ ಭಿಕ್ಷಾಪಾತ್ರೆ ನೀಡಿದೆ. ಯಡಿಯೂರಪ್ಪ ಅವರೇ, ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿಪಡಿಸಲು ಹೇಳಿ ಎಂದು ಆಗ್ರಹಿಸಿದ್ದಾರೆ.

ಭಾರತವನ್ನು ವಿಶ್ವಗುರು ಮಾಡ್ತೀನಿ ಅಂತ ಹೇಳಿ, ಕೊರೊನಾದಲ್ಲಿ ನಂಬರ್ ವನ್ ಮಾಡೋಕೆ ಹೊರಟಿದ್ದಾರೆ ; ಸಿದ್ದರಾಮಯ್ಯ

ಇನ್ನು ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲಿ ಭಾರತ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಗೆಲುವಿನ ಕಿರೀಟಗಳನ್ನೆಲ್ಲ ಮುಡಿಗೇರಿಸುವ ನರೇಂದ್ರ ಮೋದಿ ಅವರಿಗೆ ವೈಫಲ್ಯಗಳ ಹೊಣೆಯನ್ನು ರಾಜ್ಯಗಳ ಹೆಗಲ ಕಡೆ ಜಾರಿಸುವ ಚಾಳಿ ಇದೆ. ಪ್ರಧಾನಿಗಳಿಗೆ ಅವರ ಜವಾಬ್ದಾರಿ ನೆನಪಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಿ ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕದ ಬೇಡಿಕೆಯ ಶೇಕಡಾ ಹತ್ತರಷ್ಟೂ ಪೂರೈಸಿಲ್ಲ. ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು ನರೇಂದ್ರ ಮೋದಿ ಅವರ ಕಣ್ಣು ತೆರೆಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ