ಆ್ಯಪ್ನಗರ

ಐಟಿ ವಿರುದ್ಧ ಪ್ರತಿಭಟನೆ, ಎಫ್‌ಐಆರ್‌ ರದ್ದು ಕೋರಿ ಎಚ್‌ಡಿಕೆ ಹೈಕೋರ್ಟ್‌ಗೆ ಮೊರೆ

ಐಟಿ ಇಲಾಖೆ ಅಧಿಕಾರಿಗಳು 2019ರ ಮಾ.27 ಮತ್ತು 28ರಂದು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ ಮುಖಂಡರು, ಸದಸ್ಯರ ಮನೆಯ ಮೇಲೆ ದಾಳಿ ನಡೆಸಿದ್ದರು. ಆಗ ಮಾ. 28ರಂದು ಅಂದಿನ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಸಚಿವ ಸಂಪುಟದ ಸದಸ್ಯರು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ ಅನೇಕ ನಾಯಕರು, ನಗರದ ಐಟಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು.

Vijaya Karnataka 14 Feb 2020, 8:09 pm
ಬೆಂಗಳೂರು: ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಜೆಡಿಎಸ್‌ ಮತ್ತು ಕಾಂಗ್ರೆಸ್‌ನ ಕೆಲ ಮುಖಂಡರ ವಿರುದ್ಧ ದಾಳಿ ನಡೆಸಿದ್ದನ್ನು ಖಂಡಿಸಿ ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.
Vijaya Karnataka Web HD Kumaraswamy


ಎಚ್‌ಡಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿಎ ಪಾಟೀಲ್‌ ಅವರಿದ್ದ ಏಕಸದಸ್ಯ ಪೀಠ, ಮೂಲ ದೂರುದಾರ ಮಲ್ಲಿಕಾರ್ಜುನ್‌, ಕಮರ್ಷಿಯಲ್‌ ಸ್ಟ್ರೀಟ್‌ ಠಾಣಾ ಪೊಲೀಸರಿಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಪರ ವಕೀಲರು, ‘‘ತಮ್ಮ ಕಕ್ಷಿದಾರರ ವಿರುದ್ಧ ಕ್ರಿಮಿನಲ್‌ ದೂರು ದಾಖಲಿಸಿರುವುದು ಮೂಲಭೂತ ಹಕ್ಕಾದ ಅಭಿವ್ಯಕ್ತಿ ಸ್ವಾತಂತ್ರ್ಯದ ಸ್ಪಷ್ಟ ಉಲ್ಲಂಘನೆಯಾಗಿದೆ. ವಾಕ್‌ ಸ್ವಾತಂತ್ರ್ಯವು ಒಬ್ಬ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಬಹುಮುಖ್ಯ ಅಂಶ. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಶಾಸಕರು ಕಾನೂನಿನ ಪರಿಧಿಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಹಕ್ಕು ಹೊಂದಿದ್ದಾರೆ. ದಾಳಿ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿರುವುದು ತಪ್ಪಲ್ಲ. ಆದ್ದರಿಂದ ತಮ್ಮ ವಿರುದ್ಧದ ಖಾಸಗಿ ದೂರು, ಆ ಕುರಿತು ತನಿಖೆಗೆ ಆದೇಶಿಸಿದ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು’’ ಎಂದು ಕೋರಿದರು.

ಐಟಿ ಇಲಾಖೆ ಅಧಿಕಾರಿಗಳು 2019ರ ಮಾ.27 ಮತ್ತು 28ರಂದು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ ಮುಖಂಡರು, ಸದಸ್ಯರ ಮನೆಯ ಮೇಲೆ ದಾಳಿ ನಡೆಸಿದ್ದರು. ಆಗ ಮಾ. 28ರಂದು ಅಂದಿನ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಸಚಿವ ಸಂಪುಟದ ಸದಸ್ಯರು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ ಅನೇಕ ನಾಯಕರು, ನಗರದ ಐಟಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು.

2019ರ ಮೇ 2ರಂದು ಮಲ್ಲಿಕಾರ್ಜುನ ಎಂಬುವರು ನಗರದ 82ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು. ಆ ದೂರಿನ ಬಗ್ಗೆ ಮೇ 3ರಂದು ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯವು ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯ ಡಿಸಿಪಿಗೆ ಆದೇಶಿಸಿತ್ತು. ಆ ಆದೇಶ ಆಧರಿಸಿ ಕಮರ್ಷಿಯಲ್‌ ಸ್ಟ್ರೀಟ್‌ ಠಾಣಾ ಪೊಲೀಸರು ನ. 27 ರಂದು ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಅದನ್ನು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ