ಆ್ಯಪ್ನಗರ

ಲೋಕಸಭೆ ಮೈತ್ರಿ ಚರ್ಚೆ ನಡೆದಿಲ್ಲ : ದೇವೇಗೌಡ

ಲೋಕಸಭಾ ಚುನಾವಣೆಗೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಪಟ್ಟಂತೆ ಜೆಡಿಎಸ್‌-ಕಾಂಗ್ರೆಸ್‌ ಮಧ್ಯೆ ಇದುವರೆಗೆ ಯಾವುದೇ ಚರ್ಚೆ ...

Vijaya Karnataka 28 Jan 2019, 5:00 am
ಬೆಂಗಳೂರು: ಲೋಕಸಭಾ ಚುನಾವಣೆಗೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಪಟ್ಟಂತೆ ಜೆಡಿಎಸ್‌-ಕಾಂಗ್ರೆಸ್‌ ಮಧ್ಯೆ ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.
Vijaya Karnataka Web devegowda


ಲೋಕಸಭಾ ಚುನಾವಣಾ ಸಿದ್ಧತೆಗೆ ಸಂಬಂಧಿಸಿದಂತೆ ಪಕ್ಷದ ಶಾಸಕರು ಹಾಗೂ ಸಂಸದರ ಜತೆ ಸಭೆ ನಡೆಸಿದ ಬಳಿಕ ಮಾತನಾಡಿ,''ಚುನಾವಣಾ ಪೂರ್ವ ಮೈತ್ರಿಯಾದರೆ ನಮಗೆ ಯಾವ ಕ್ಷೇತ್ರ ಕೊಡುತ್ತಾರೋ, ಕಾಂಗ್ರೆಸ್‌ ಯಾವ್ಯಾವ ಕ್ಷೇತ್ರಗಳನ್ನು ಉಳಿಸಿಕೊಳ್ಳಬೇಕಾಗುತ್ತದೋ ಎಂಬುದನ್ನು ಕಾದು ನೋಡಬೇಕಿದೆ,'' ಎಂದು ಹೇಳಿದರು.

''ಬೆಂಗಳೂರಿನ ಒಂದೊಂದು ಕ್ಷೇತ್ರಕ್ಕೂ ಒಬ್ಬರನ್ನು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗುವುದು. ಇದರ ಉಸ್ತುವಾರಿಯನ್ನು ರಾಜ್ಯಸಭಾ ಸದಸ್ಯ ಕುಪ್ಪೇಂದ್ರ ರೆಡ್ಡಿಯವರಿಗೆ ನೀಡಲಾಗುವುದು. ಮೈತ್ರಿಗೂ ಮುನ್ನ ಕಾರ್ಯಕರ್ತರ ಅಭಿಪ್ರಾಯ ಪಡೆದುಕೊಳ್ಳಲಾಗುವುದು. ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ,'' ಎಂದು ಹೇಳಿದರು.

''ಹಾಸನ ಲೋಕಸಭಾ ಕ್ಷೇತ್ರದಿಂದ ಮೊಮ್ಮಗ ಪ್ರಜ್ವಲ್‌ ರೇವಣ್ಣ ಅವರನ್ನು ಕಣಕ್ಕಿಳಿಸಬೇಕು ಎಂಬುದು ನನ್ನ ಅಭಿಪ್ರಾಯ. ಈ ಬಗ್ಗೆ ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಬೇಕಿದೆ. ಅದೇ ರೀತಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ತಾವು ಸ್ಪರ್ಧೆ ಮಾಡುವ ವಿಚಾರದಲ್ಲಿ ಈ ಬಗ್ಗೆ ಚರ್ಚೆ ಬೇಡ. ಮುಂದೆ ನೋಡೋಣ,''ಎಂದರು.

ಪಾಲಿಕೆಗೆ ಮೈತ್ರಿ ಇಲ್ಲ

''ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮಂಗಲೂರು, ಮೈಸೂರು, ಶಿವಮೊಗ್ಗ, ಬೆಂಗಳೂರು, ಕಲಬುರ್ಗಿ, ತುಮಕೂರು, ಸೇರಿದಂತೆ ಎಲ್ಲ ಮಹಾನಗರ ಪಾಲಿಕೆಗಳ ಚುನಾವಣೆಯನ್ನು ಸ್ವತಂತ್ರವಾಗಿ ಎದುರಿಸಲು ತೀರ್ಮಾನಿಸಲಾಗಿದೆ,'' ಎಂದು ಹೇಳಿದರು.

''ಮೈತ್ರಿ ಸರಕಾರದ ಪಾಲುದಾರ ಪಕ್ಷ ಕಾಂಗ್ರೆಸ್‌ ಕೂಡಾ ಪಾಲಿಕೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ ಮಾಡಲು ತೀರ್ಮಾನಿಸಿದೆ. ಚುನಾವಣೆ ಬಳಿಕ ಮೇಯರ್‌ ಆಯ್ಕೆ ಸಂದರ್ಭದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆ ಮಾಡಲಾಗುವುದು. ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸಲು ಚರ್ಚೆ ನಡೆಸಲಾಗಿದೆ. ಈ ಹಿಂದೆ 8 ವರ್ಷಗಳ ಕಾಲ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್‌ ಆಡಳಿತ ನಡೆಸಿತ್ತು ಎಂದು ಹೇಳಿದರು.

''ದೇಶದಲ್ಲಿ ಮುಂದೆ ಯಾರು ಪ್ರಧಾನಿಯಾಗಲಿದ್ದಾರೆ ಎಂಬುದು ಮುಖ್ಯವಲ್ಲ. ಸ್ಥಿರ ಸರಕಾರ ನೀಡುವುದು ಮುಖ್ಯ. ಸಂಸತ್‌ ಅಧಿವೇಶನಕ್ಕೂ ಮುನ್ನ ಎನ್‌ಡಿಎಯೇತರ ಪಕ್ಷಗಳು ಒಗ್ಗೂಡಬೇಕಿದೆ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ