ಆ್ಯಪ್ನಗರ

ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕು ಕಚೇರಿಗೆ ಮುತ್ತಿಗೆ

ವಿಕ ಸುದ್ದಿಲೋಕ ಮದ್ದೂರು ತೂತುಕುಡಿಯಲ್ಲಿ ರೈತರ ಮೇಲೆ ಗೋಲಿಬಾರ್‌ ಮಾಡಿಸಿರುವ ತಮಿಳುನಾಡು ಸರಕಾರದ ಕ್ರಮ ಖಂಡಿಸಿ ಹಾಗೂ ರೈತರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ...

Vijaya Karnataka 27 May 2018, 5:00 am
ಮದ್ದೂರು: ತೂತುಕುಡಿಯಲ್ಲಿ ರೈತರ ಮೇಲೆ ಗೋಲಿಬಾರ್‌ ಮಾಡಿಸಿರುವ ತಮಿಳುನಾಡು ಸರಕಾರದ ಕ್ರಮ ಖಂಡಿಸಿ ಹಾಗೂ ರೈತರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ತಾಲೂಕು ಕಚೇರಿಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿ ಶಿರಸ್ತೇದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
Vijaya Karnataka Web the taluk office is beset by the demand for mandy by mandya raitha sanga workers
ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕು ಕಚೇರಿಗೆ ಮುತ್ತಿಗೆ


ಪಟ್ಟಣದ ತಾಲೂಕು ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತರು ತಮಿಳುನಾಡು ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಸರಕಾರವನ್ನು ವಜಾಗೊಳಿಸಿ ತೂತುಕುಡಿಯಲ್ಲಿ ಸ್ಥಾಪಿಸಲು ಮುಂದಾಗಿರುವ ತಾಮ್ರ ಸಂಸ್ಕ್ರರಣಾ ಘಟಕದ ಕಾಮಗಾರಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿದರು.

ರೈತ ವಿರೋಧಿ ನೀತಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರಾಜ್ಯದ ಎಲ್ಲ ರೈತರ ಹಾಗೂ ಸ್ತ್ರೀಶಕ್ತಿ ಸಂಘಗಳ ರಾಷ್ಟ್ರೀಕೃತ ಹಾಗೂ ಸಹಕಾರ ಸಂಘಗಳ ಸಂಪೂರ್ಣ ಸಾಲ ಮನ್ನ ಮಾಡುವುದಾಗಿ ಚುನಾವಣಾ ಸಂದರ್ಭದಲ್ಲಿ ಹೇಳಿದ್ದರು. ಆದರೀಗ ಸಾಲ ಮನ್ನ ಮಾಡದೇ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಪ್ರತಿಭಟನಾನಿರತರು ದೂರಿದರು.

ರಾಜ್ಯದ ರೈತರು ಸಂಕಷ್ಟ ಪರಿಸ್ಥಿತಿಯಲ್ಲಿದ್ದು ಮಳೆ, ಬೆಳೆ ಇಲ್ಲದೇ ಕಂಗಾಲಾಗಿರುವ ಪ್ರಸಕ್ತ ದಿನಗಳಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಕುಮಾರಸ್ವಾಮಿ ಅವರು ಕೂಡಲೇ ರೈತರ ಸಾಲ ಮನ್ನಾ ಮಾಡಬೇಕು. ತಪ್ಪಿದಲ್ಲಿ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ರೈತರು ಕಾರ್ಖಾನೆಗೆ ಸರಬರಾಜು ಮಾಡಿರುವ ಕಬ್ಬಿನ ಬಾಕಿ ಹಣ ಪಾವತಿಸದೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ವಿಳಂಬ ನೀತಿ ಅನುಸರಿಸುತ್ತಿವೆ. ತಾಲೂಕಿನ ಚಾಂಷುಗರ್‌ ಹಾಗೂ ಎನ್‌ಎಸ್‌ಎಲ್‌ ಕಾರ್ಖಾನೆ ಅಧಿಕಾರಿಗಳಿಗೆ ಬಾಕಿ ಉಳಿಸಿಕೊಂಡಿರುವ ಹಣವನ್ನು ಪಾವತಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರೂ, ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ ್ಯವಹಿಸಲಾಗಿದೆ. ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ರೈತರು ಹಾಗೂ ಸಾರ್ವಜನಿಕರಿಂದ ಅಧಿಕಾರಿಗಳು ಲಂಚ ವಸೂಲಿ ಮಾಡಲಾಗುತ್ತಿದೆ. ಆದರೆ ತಹಸೀಲ್ದಾರ್‌ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ ್ಯ ವಹಿಸಿದ್ದಾರೆಂದು ಪ್ರತಿಭಟನಾನಿರತರು ಆರೋಪಿಸಿದರು.

ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ತಾಲೂಕು ಕಚೇರಿಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿದ ರೈತ ಸಂಘದ ಸದಸ್ಯರು ಶೀಘ್ರವೇ ಎಲ್ಲ ಬೇಡಿಕೆಗಳ ಕುರಿತು ಕ್ರಮ ವಹಿಸದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದರು. ಸಂಘಟನೆಯ ತಾಲೂಕು ಅಧ್ಯಕ್ಷ ಜಿ.ಎ. ಶಂಕರ್‌, ಜಿಲ್ಲಾ ಉಪಾಧ್ಯಕ್ಷ ಅಣ್ಣೂರು ಮಹೇಂದ್ರ, ಪದಾಧಿಕಾರಿಗಳಾದ ರವಿಕುಮಾರ್‌, ಸಿದ್ದೇಗೌಡ, ಶಿವಕುಮಾರ್‌, ವರದರಾಜು, ಲಿಂಗಪ್ಪಾಜಿ, ರಾಜಣ್ಣ, ವೆಂಕಟೇಶ್‌, ಪುಟ್ಟಸ್ವಾಮಿ, ರಾಮಲಿಂಗು ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ