ಆ್ಯಪ್ನಗರ

ತೊಗರಿ ಬಾಕಿ ವಾರದಲ್ಲೇ ಪಾವತಿಸಿ

ಜಿಲ್ಲೆಯಲ್ಲಿ ರೈತರಿಂದ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರದಿಂದ ಖರೀದಿಸಿದ ತೊಗರಿಯ ಹಣ ಬಾಕಿಯಿರುವುದು ಗಮನಕ್ಕೆ ಬಂದಿದ್ದು ಮುಂದಿನ ಒಂದು ವಾರದಲ್ಲಿ ರೈತರಿಗೆ ಹಣ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕುಮಾರ ನಾಯಕ ಭರವಸೆ ನೀಡಿದರು.

Vijaya Karnataka 12 Jun 2018, 12:00 am
ರಾಯಚೂರು: ಜಿಲ್ಲೆಯಲ್ಲಿ ರೈತರಿಂದ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರದಿಂದ ಖರೀದಿಸಿದ ತೊಗರಿಯ ಹಣ ಬಾಕಿಯಿರುವುದು ಗಮನಕ್ಕೆ ಬಂದಿದ್ದು ಮುಂದಿನ ಒಂದು ವಾರದಲ್ಲಿ ರೈತರಿಗೆ ಹಣ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕುಮಾರ ನಾಯಕ ಭರವಸೆ ನೀಡಿದರು.
Vijaya Karnataka Web RAC-RCH11JD01


ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 22 ಸಾವಿರ ರೈತರಿಂದ ಕಳೆದ ಬಾರಿ ತೊಗರಿ ಖರೀದಿಸಲಾಗಿತ್ತು. ಈ ಪೈಕಿ ಇನ್ನೂ 744 ಜನ ರೈತರಿಗೆ ಹಣ ಪಾವತಿ ಬಾಕಿಯಿದೆ. ಈ ನಿಟ್ಟಿನಲ್ಲಿ ಮುಂದಿನ ಒಂದು ವಾರದಲ್ಲಿ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕಳೆದ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸುರಿದ ಆಲಿಕಲ್ಲು ಮಳೆಯಿಂದ ಜಿಲ್ಲೆಯ ನಾನಾ ಕಡೆ ಬೆಳೆ ಹಾನಿ ಸಂಭವಿಸಿತ್ತು. ಮಾನ್ವಿ ತಾಲೂಕಿನ ಅನೇಕ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದ್ದು, ಒಟ್ಟು 2237 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದ್ದು, ಇದಕ್ಕಾಗಿ 152ಲಕ್ಷ ರು. ಬೆಳೆ ಪರಿಹಾರ ನೀಡಲು ಕೋರಿ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಈ ಬಗ್ಗೆ ಸರಕಾರದ ಮಟ್ಟದಲ್ಲಿ ತಾವು ಪರಿಶೀಲಿಸಿ ಶೀಘ್ರ ಪಾವತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಸಿದ್ಧತೆ ಪರಿಶೀಲನೆ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಕೃಷಿ ಸೇರಿದಂತೆ ನಾನಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಡೆದಿರುವ ಸಿದ್ಧತೆಯನ್ನು ಪರಿಶೀಲಿಸಿದ್ದು, ಎಲ್ಲ ಇಲಾಖೆಗಳು ಎಂಥದ್ದೇ ಪರಿಸ್ಥಿತಿ ಎದುರಿಸಲು ಸಿದ್ಧವಾಗಿವೆ. ಜೂನ್ ಜುಲೈ ತಿಂಗಳಿನಲ್ಲಿ ಬಿರುಗಾಳಿಯಿಂದ ಕೂಡಿದ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಸಿದ್ಧರಾಗಿರುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಕೃಷಿ ಇಲಾಖೆಯು ಮುಂಗಾರು ಹಂಗಾಮಿಗೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರದ ಸೂಕ್ತ ದಾಸ್ತಾನಿದೆ. ರೈತರು ಆತಂಕ ಪಡಬೇಕಿಲ್ಲ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಅಗತ್ಯಕ್ಕಿಂತ ಹೆಚ್ಚಿನ ಬಿತ್ತನೆ ಬೀಜ ಮತ್ತು ರಸಗೊಬ್ಬರ ಲಭ್ಯವಿದೆ ಎಂದು ಹೇಳಿದರು.

ಮಾನ್ವಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಈಚೆಗೆ ಬೀಸಿಗ ಬಿರುಗಾಳಿಗೆ ಒಟ್ಟು 1027 ಮನೆಗಳಿಗೆ ಹೊದಿಸಿದ ತಗಡಿನ ಶೀಟುಗಳು ಹಾರಿ ಹೋಗಿದ್ದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಭೇಟಿ ವೇಳೆ ಹಾನಿಯನ್ನು ಗಮನಿಸಿದ್ದು ಅವರಿಗೆ ಸರಕಾರದಿಂದ ತಲಾ 4100 ರು. ಪರಿಹಾರ ನೀಡಲಾಗುತ್ತಿದೆ. ಅದೇ ರೀತಿ ಘಟನೆಯಲ್ಲಿ ಗಾಯಗೊಂಡವರಿಗೆ ಸರಕಾರದ ನಿಯಮಾವಳಿಗಳಡಿ ಪರಿಹಾರ ನೀಡಲು ಸಾಧ್ಯವಿದ್ದಲ್ಲಿ ಅಂಥವರಿಗೂ ಪರಿಹಾರ ದೊರಕಿಸಲಾಗುತ್ತದೆ ಎಂದು ಹೇಳಿದರು.

ಫಸಲ್ ಬಿಮಾ: ಬೆಳೆ ವಿಮೆಗೆ ಜಿಲ್ಲೆಯಲ್ಲಿ ರೈತರ ಪ್ರತಿಕ್ರಿಯೆ ನೀರಸವಾಗಿದೆ. ಇದಕ್ಕೆ ಕಳೆದ ಮೂರು ವರ್ಷಗಳಲ್ಲಿ ರೈತರ ಬೆಳೆ ನಷ್ಟವಾಗಿದ್ದರೂ ಹಣ ಪಾವತಿಯಾಗದಿರುವುದು ಕಾರಣ ಎಂಬುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಸರಕಾರದ ಮಟ್ಟದಲ್ಲಿ ಸಂಬಂಧಿಸಿದ ವಿಮಾ ಕಂಪನಿಗಳು ಬಾಕಿ ಉಳಿಸಿಕೊಂಡಿರುವ ರೈತರ ಬೆಳೆ ಹಾನಿ ನಷ್ಟದ ಹಣವನ್ನು ಪಾವತಿಸುವಂತೆ ಸೂಕ್ತ ಕ್ರಮಕ್ಕೆ ಮನವಿ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಮಾನ್ವಿ ತಾಲೂಕಿನಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡು ಒಂದೂವರೆ ವರ್ಷವಾಗಿದ್ದರೂ ಪರಿಹಾರ ನೀಡದೇ ನಿರ್ಲಕ್ಷ್ಯ ತೋರಿದ ಪ್ರಕರಣಗಳು ಪತ್ತೆಯಾಗಿವೆ. ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಂಡು ಪರಿಹಾರ ಪಾವತಿಸಲು ಸೂಚಿಸಲಾಗಿದೆ. ಅದೇ ರೀತಿ ಕಳೆದ ಏಪ್ರಿಲ್ ನಿಂದ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು ನಾಲ್ವರು ರೈತರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ದೂರು ದಾಖಲಾಗಿದ್ದು, ಸತ್ಯಾಸತ್ಯತೆ ಪರಿಶೀಲಿಸಿ ಸೂಕ್ತ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭ ಎಡಿಸಿ ಗೋವಿಂದ ರೆಡ್ಡಿಯಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ